BelagaviState

ಖಾಸಗಿ ಆಸ್ಪತ್ರೆಗಳ ಶೇ.೫೦ ಬೆಡ್ ಜಿಲ್ಲಾಡಳಿತಕ್ಕೆ ನೀಡಲುಜಿಲ್ಲಾಧಿಕಾರಿ ಡಾ.ಕೆ.ಹರೀಶ್‌ಕುಮಾರ್ ಸೂಚನೆ


ಬೆಳಗಾವಿ: ಜಿಲ್ಲೆಯಲ್ಲಿ ಆಯುಷ್ಮಾನ್-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟಾರೆ ೩೯೨೫ ಬೆಡ್ ಗಳು ಲಭ್ಯವಿದ್ದು, ಇದರ ಶೇ.೫೦ ರಷ್ಟು ಬೆಡ್ ಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಡಳಿತದ ಸುಪರ್ದಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಏ.೨೬) ನಡೆದ ಜಿಲ್ಲಾ ತಜ್ಞರ ಸಲಹಾ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲಭ್ಯವಿರುವ ೩೯೨೫ ಬೆಡ್ ಗಳ ಪೈಕಿ ಶೇ.೫೦ ರಷ್ಟು ಬೆಡ್ ಗಳನ್ನು ಅಂದರೆ ಸುಮಾರು ೨೦೦೦ ಬೆಡ್ ಗಳನ್ನು ಜಿಲ್ಲಾಡಳಿತಕ್ಕೆ ನೀಡಬೇಕಾಗುತ್ತದೆ. ಆದರೆ ಇದುವರೆಗೆ ಕೇವಲ ೬೪೧ ಬೆಡ್‌ಗಳನ್ನು ಮಾತ್ರ ಮೀಸಲಿಡಲಾಗಿದೆ. ಸದ್ಯಕ್ಕೆ ಈ ಬೆಡ್ ಗಳು ಸಾಕಾಗಬಹುದು. ಆದರೆ ಕೋವಿಡ್ ಸೋಂಕಿತರ ಸಂಖ್ಯೆಗಣನೀಯವಾಗಿ ಹೆಚ್ಚುತ್ತಿರುವುದರಿಂದ ಮುಂದಿನ ವಾರದೊಳಗೆ ಉಳಿದ ಬೆಡ್ ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಟ್ಟು ಜಿಲ್ಲಾಡಳಿತಕ್ಕೆ ನೀಡಬೇಕು ಎಂದು ತಿಳಿಸಿದರು.

ಆಕ್ಸಿಜನ್ ಕೊರತೆ ಇಲ್ಲ; ಹೆಚ್ಚುವರಿ ಪೂರೈಕೆಗೆ ಕ್ರಮ:

ಜಿಲ್ಲೆಯಲ್ಲಿ ಸದ್ಯಕ್ಕೆ ಆಕ್ಸಿಜನ್ ಕೊರತೆ ಕಂಡುಬAದಿಲ್ಲ; ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನದಲ್ಲಿರಿಸಿಕೊಂಡು ಮುಂಜಾಗ್ರತಾ ಕ್ರಮವಾಗಿ  ಆಕ್ಸಿಜನ್ ಏಜೆನ್ಸಿ ಮತ್ತು ಪೂರೈಕೆದಾರರನ್ನು ಗುರುತಿಸಿ ಇನ್ನೂ ಹೆಚ್ವಿನ ಆಕ್ಸಿಜನ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸಭೆಯಲ್ಲಿ ತಿಳಿಸಿದರು.

ಆಕ್ಸಿಜನ್ ಪೂರೈಕೆದಾರರನ್ನು ಗುರುತಿಸಿ ಹೆಚ್ಚುವರಿ ಆಕ್ಸಿಜನ್ ಖರೀದಿ ಪ್ರಕ್ರಿಯೆಯನ್ನು ನಡೆಸುವ ಜವಾಬ್ದಾರಿಯನ್ನು ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ನೇತೃತ್ವದ ಸಮಿತಿಗೆ ವಹಿಸಲಾಗಿದೆ.ಸದರಿ ಸಮಿತಿಯವರು ನಿಪ್ಪಾಣಿ ಹಾಗೂ ಬೆಳಗಾವಿಯಲ್ಲಿರುವ ಆಕ್ಸಿಜನ್ ಉತ್ಪಾದನಾ ಘಟಕಗಳಿಗೆ ಭೇಟಿ ನೀಡಿ ಹೆಚ್ಚುವರಿ ಆಕ್ಸಿಜನ್ ಪಡೆಯಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು. ಳ್ಳಾರಿಯ ಬಲ್ಡೋಟಾ ಕಂಪೆನಿ ಕೂಡ ಆಕ್ಸಿಜನ್ ನೀಡಲು ಒಪ್ಪಿಕೊಂಡಿರುವುದರಿAದ ಸದ್ಯಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ತಡೆಗೆ ಕ್ರಮ:

ರಾಜ್ಯದ ಕೆಲವು ಕಡೆಗಳಲ್ಲಿ ವರದಿಯಾಗಿರುವಂತೆ ಜಿಲ್ಲೆಯಲ್ಲಿ ರೆಮಿಡಿಸಿವಿರ್ ಕೊರತೆ ಇಲ್ಲ. ವೈದ್ಯರ ಶಿಫಾರಸ್ಸಿನಂತೆ ಅಗತ್ಯವಿರುವ ರೋಗಿಗಳಿಗೆ ರೆಮಿಡಿಸಿವಿರ್ ಪೂರೈಕೆಗೆ ಅಪರ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ರಚಿಸಲಾಗಿರುತ್ತದೆ. ಆದರೆ ಸದರಿ ಔಷಧಿಯು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಗಟ್ಟಲು ಈಗಾಗಲೇ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದರು.

ಶವಸಂಸ್ಕಾರದ ಅವಧಿ ವಿಸ್ತರಣೆಗೆ ಕ್ರಮ:

ಬೆಳಗಾವಿ ನಗರದಲ್ಲಿರುವ ಚಿತಾಗಾರಗಳಲ್ಲಿ ಬೆಳಿಗ್ಗೆ ೮ ರಿಂದ ರಾತ್ರಿ ೯ ಗಂಟೆಯವರಗೆ ಶವಸಂಸ್ಕಾರಕ್ಕೆ ಅವಕಾಶವಿದೆ. ಆದರೆ ರಾತ್ರಿ ೯ ಗಂಟೆಯ ನಂತರ ಶವಸಂಸ್ಕಾರಕ್ಕೆ ತೊಂದರೆಯಾಗುತ್ತಿರುವ ಕುರಿತು ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನಸೆಳೆಯಲಾಯಿತು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಈ ವಿಷಯದ ಕುರಿತು ಮಹಾನಗರ ಪಾಲಿಕೆಯ ಆಯುಕ್ತರ ಜತೆ ಚರ್ಚಿಸಿ ನಿಯಮಾವಳಿ ಪ್ರಕಾರ ಅವಕಾಶ ಕಲ್ಪಿಸುವುದಾಗಿ ಭರವಸೆಯನ್ನು ನೀಡಿದರು.

ಕೋವಿಡ್-೧೯ ಸೋಂಕು ನಿಯಂತ್ರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಸರಕಾರವು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಹಾಗೂ ಖಾಸಗಿ ಆಸ್ಪತ್ರೆಗಳು ಈ ಕಾರ್ಯದಲ್ಲಿ ಕೈಜೋಡಿಸುವ ಮೂಲಕ ಕೋವಿಡ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಅವರು, ಬಿಮ್ಸ್ ನ ಹಿರಿಯ ಅಧಿಕಾರಿಗಳು ಮತ್ತು ವೈದ್ಯರ ಜತೆ ಸಭೆ ನಡೆಸಿ ಕೋವಿಡ್ ಚಿಕಿತ್ಸೆಗೆ ಸಂಬAಧಿಸಿದAತೆ ಮಾಹಿತಿಯನ್ನು ಪಡೆದುಕೊಂಡರು.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ್ ಎಸ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಬಿಮ್ಸ್ ನಿರ್ದೇಶಕ ಡಾ.ವಿನಯ್ ದಾಸ್ತಿಕೊಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಬಿಮ್ಸ್ ನ ಹಿರಿಯ ಅಧಿಕಾರಿಗಳು, ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು, ಜಿಲ್ಲಾ ತಜ್ಞರ ಸಲಹಾ ಸಮಿತಿಯ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.


Leave a Reply