karanatakaState

ರಾಜ್ಯಸರಕಾರದ ವಿರುದ್ಧ ಕುಮಾರಸ್ವಾಮಿ ಟ್ವಿಟರ್ ವಾರ್


ಬೆಂಗಳೂರು: ರಾಜ್ಯಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತೆ ಟ್ವಿಟರ್ ವಾರ್ ಮಾಡಿದ್ದು ಮಾತಿನ ಚಾಟಿ ಬೀಸಿದ್ದಾರೆ. ಸರಕಾರ ಬೂಟಾಟಿಕೆ ಆಡಳಿತ ಮಾಡುವುದನ್ನು ಬಿಟ್ಟು ಕೋವಿಡ್ ನಿಯಂತ್ರಣ ಮಾಡಿ, ‘ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ’ ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು? ಎಂದು ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿದ ಅವರು ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ ಎಂದಿದ್ದಾರೆ.

ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ. 18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆತುರಗಾರನಿಗೆ ಬುದ್ಧಿ ಕಡಿಮೆ ಎಂಬಂತೆ ಕೇವಲ ಮಾತಿನಲ್ಲಿ ಜನರನ್ನು ಓಲೈಸುವ ಇಂತಹ ಬೂಟಾಟಿಕೆಯನ್ನು ಸರ್ಕಾರ ಬಿಡಬೇಕು. “ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ” ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು? ಎಂದು ಚಾಟಿ ಬೀಸಿದ್ದಾರೆ.

ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ ಎಂಬ ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ. 18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ ಎಂದು ಟೀಕಿಸಿದ್ದಾರೆ.

ಅರಿವುಗೇಡಿಗಳಂತೆ ಪುಕ್ಕಟೆ ಪ್ರವಚನ ನೀಡುತ್ತಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರುಗಳು ಕನಿಷ್ಠ ಸಾಮಾನ್ಯ ರೀತಿ ಪ್ರತಿಕ್ರಿಯಿಸುವುದನ್ನು, ಇಂತಹ ದುರಿತ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಯನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಒಳಿತು. ಲಸಿಕೆ ನೀಡುವ ವಿಷಯದಲ್ಲಿ ಜನತೆ ಸಿನಿಕರಾಗದಂತೆ ಎಚ್ಚರವಹಿಸುವುದು ಸರ್ಕಾರಗಳ ಜವಾಬ್ದಾರಿ. ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಉಡಾಫೆಯ ಧೋರಣೆ ತಳೆಯುವುದು ಸರಿಯಲ್ಲ ಎಂದಿದ್ದಾರೆ.

ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ ಕ್ರೋಧಿ ಈ ಲೋಕದ ಭುಂಜಕರು ನಾ ಹೆಚ್ಚು ತಾ ಹೆಚ್ಚು ಎಂದು ನಡೆದಾಡುವರಯ್ಯ ನಾನು ನೀನೆಂಬ ಉಭಯವಳಿದು ತಾನು ತಾನಾದುದ ನಾನಾರನೂ ಕಾಣೆನಯ್ಯ ಝೇಂಕಾರ ನಿಜಲಿಂಗಪ್ರಭುವೆ – ಜಕ್ಕಣಯ್ಯ ಎಂದು ವಚನಗಳನ್ನು ಉಲ್ಲೇಖಿಸುವುದರ ಮೂಲಕ ಸರಕಾರದ ನಡೆಯ ವಿರುದ್ಧ ಟ್ವಿಟರ್ ಮಳೆಗೈದಿದ್ದಾರೆ.


Leave a Reply