Koppal

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನಾ ಸಭೆ


ಕೊಪ್ಪಳ : ನರೇಗಾ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಕೊಪ್ಪಳ ಜಿಲ್ಲೆಯಲ್ಲಿನ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ.ಮಹೇಶ ಹೇಳಿದರು.

ಕೊಪ್ಪಳ ಜಿಲ್ಲಾ ಪಂಚಾಯತ್ ಪ್ರಗತಿ ಹಾಗೂ ಅನಿರ್ಭಂದಿತ ಮತ್ತು 15ನೇ ಹಣಕಾಸು ಯೋಜನೆಯ ಕ್ರೀಯಾ ಯೋಜನೆ ತಯಾರಿಸುವ ಕುರಿತು ಕೃಷಿ ಇಲಾಖೆ ಸಭಾಂಗಣದಲ್ಲಿ ಗುರುವಾರದಂದು (ಜು. 29) ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

15ನೇ ಹಣಕಾಸು ಯೋಜನೆಯ ಅನುದಾನವನ್ನು ಬಳಸಿಕೊಂಡು ಸರ್ಕಾರಿ ಶಾಲೆಗಳಲ್ಲಿ ಗ್ರಂಥಾಲಯ, ರೀಡಿಂಗ್ ಹಾಲ್, ಶಾಲಾ ಕಟ್ಟಡ ದುರಸ್ತಿ ಮಾಡಿಸಲು ಹಾಗೂ ನೂತನ ಕಟ್ಟಡಗಳನ್ನು ನಿರ್ಮಿಸಿಕೊಳ್ಳಬಹುದು. ಹಾಗೂ ನರೇಗಾ ಯೋಜನೆಯನ್ನು ಬಳಕೆ ಮಾಡಿಕೊಂಡು ಸರ್ಕಾರಿ ಶಾಲೆಗಳಲ್ಲಿ ಕೈತೋಟ, ಆಟದ ಮೈದಾನ, ಅಡುಗೆ ಕೋಣೆ ಹಾಗೂ ಶಾಲಾ ಕಂಪೌಂಡ ನಿರ್ಮಿಸಿಕೊಂಡು ವಿದ್ಯಾರ್ಥಿಗಳಿಗಾಗಿ ಸುಸಜ್ಜಿತ ವಾತಾವರಣವನ್ನು ಕಲ್ಪಿಸಬೇಕು ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಜಿಲ್ಲೆಯಲ್ಲಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಿಕೊಳ್ಳಲು ನರೇಗಾ ಯೋಜನೆಯಡಿ ಅನುದಾನ ಲಭ್ಯವಿದ್ದು, ಎಲ್ಲ ತಾಲ್ಲೂಕುಗಳಲ್ಲಿ ಅವಶ್ಯವಾಗಿ ಬೇಕಾಗುವ ಅಂಗನವಾಡಿ ಕಟ್ಟಡಗಳನ್ನು ತಮ್ಮ ಇಲಾಖೆಯ ಅನುದಾನದೊಂದಿಗೆ ಒಗ್ಗೂಡಿಸಿಕೊಂಡು ನಿರ್ಮಿಸಿಕೊಳ್ಳಿ. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶೀಘ್ರವಾಗಿ ಜಾಗೆಯನ್ನು ಗುರುತಿಸಿಕೊಂಡು ಪ್ರಸ್ತಾವನೆ ಸಲ್ಲಿಸಿ ಕಾಮಗಾರಿಯನ್ನು ಆರಂಭಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯವರು ಮಾನಸಿಕ ಅಸ್ವಸ್ಥ ಕೇಂದ್ರಕ್ಕಾಗಿ ಸೂಕ್ತ ಸ್ಥಳ ಗುರುತಿಸಿ ನೀಲ ನಕ್ಷೆ ತಯಾರಿಸಿ, ವರದಿ ಸಲ್ಲಿಸಬೇಕು. ಅದಕ್ಕೆ ಬೇಕಾದ ಅನುದಾನವನ್ನು ನೀಡಲಾಗುವುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಿಕೊಳ್ಳಿ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ನಾಮಫಲಕಗಳನ್ನು ಹಾಕಬೇಕು. ಅಲ್ಲದೇ ಅಗತ್ಯ ಪರಿಕರಗಳನ್ನು ಖರೀದಿಸಲು ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯವರು ಕೇವಲ ಶಾಸಕರು ಮತ್ತು ಸಂಸದರ ರಸ್ತೆ ಕಾಮಗಾರಿಗಳ ಕೆಲಸ ಮಾಡುತ್ತಿದ್ದು, ಅವರಿಗೆ ಮಾತ್ರ ಸೀಮಿತವಾಗದೇ ಬೇರೆ-ಬೇರೆ ಇಲಾಖೆಗಳ ಕಾಮಗಾರಿಗಳನ್ನೂ ಸಹ ನಿರ್ವಹಿಸಬೇಕು ಎಂದು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವಸತಿ ನಿಲಯಗಳನ್ನು ನಿರ್ಮಾಣ, ದುರಸ್ತಿ ಹಾಗೂ ಕೊಠಡಿಗಳ ನಿರ್ಮಾಣಕ್ಕೆ 15ನೇ ಹಣಕಾಸು ಯೋಜನೆಯ ಅನುದಾನ ಬಳಕೆಗೆ ಅವಕಾಶವಿದ್ದು, ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಹೊಸ ಗ್ರಾಮ ಪಂಚಾಯತಿಗಳಿಗೆ 15ನೇ ಹಣಕಾಸು ಮತ್ತು ನರೇಗಾ ಯೋಜನೆಯಡಿ ಒಗ್ಗೂಡಿಸುವಿಕೆ ಮೂಲಕ ಹೊಸ ಕಟ್ಟಡ ನಿರ್ಮಾಣ ಮಾಡಿಕೊಳ್ಳಬಹುದು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆಗಳು ಇರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನುಮ್ ಅವರು ಮಾತನಾಡಿ, ನರೇಗಾ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಕೈತೋಟ, ಆಟದ ಮೈದಾನ, ಕಂಪೌಂಡ್ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಶರಣಬಸವರಾಜ, ಯೋಜನಾ ನಿರ್ದೇಶಕರಾದ ಟಿ.ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಜಂಟಿ ಕೃಷಿ ನಿರ್ದೇಶಕ ಸದಾಶಿವ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದೇಶಕಿ ಅಕ್ಕಮಹಾದೇವಿ ಸೇರಿದಂತೆ ವಿವಿಧ ತಾಲ್ಲೂಕುಗಳ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು

ವರದಿ-ಆರ್ ಶರಣಪ್ಪ ಗುಮಗೇರಾ
ಕೊಪ್ಪಳ.


Leave a Reply