State

ಶೀಘ್ರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ಭಕ್ತರ ಸಮಸ್ಯೆ ಪರಿಹಾರ: ಶಶಿಕಲಾ ಜೊಲ್ಲೆ


ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಧಾರ್ಮಿಕ ಪರಿಷತ್ತಿನ ಸಭೆ ನಡೆಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುವ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಇರುವ ಪ್ರಮುಖ ದೇವಸ್ಥಾನಗಳ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಇಲಾಖೆಯಲ್ಲಿ ನಾವು ಮಾಡಬೇಕಾದಂತಹ ಕೆಲಸ ಬಹಳ ಇದೆ. ಇಡೀ ಜಗತ್ತಿನಲ್ಲಿಯೇ ನಮ್ಮ ಸಂಸ್ಕೃತಿ, ಆಧ್ಯಾತ್ಮಿಕತೆಗೆ ಹೆಸರುವಾಸಿಯಾಗಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ಕೆಲಸ ನಮ್ಮದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆಯ ಕಾರ್ಯದರ್ಶಿಯ ಜೊತೆಗೆ ಚರ್ಚೆ ನಡೆಸಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಭರ್ತಿ ಮಾಡುವ ಕುರಿತು ಚಿಂತನೆ ನಡೆಸಲಾಗುವುದು. ಇಲಾಖೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೆ ಕಡೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರೆ ಅಥವಾ ಇಲಾಖಾ ಹಂತದಲ್ಲಿ ಅವ್ಯವಹಾರ ನಡೆಯುತ್ತಿದ್ದರೆ, ಹಿರಿಯ ಅಧಿಕಾರಿಗಳು ಅದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬೆಂಗಳೂರಿನ ಕೆಲ ದೇವಸ್ಥಾನದ ಅವ್ಯವಹಾರದ ಬಗ್ಗೆ ಆರೋಪ ಕೇಳಿ ಬಂದಿರುವ ಹಿನ್ನಲೆ ಮುಜರಾಯಿ ಇಲಾಖೆಯ ಆಯುಕ್ತರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಮಿಟಿಗಳು ಇಲಾಖೆಯ ಮಾಹಿತಿಯನ್ನು ಧಾರ್ಮಿಕ ಪರಿಷತ್ ಸದಸ್ಯರಿಗೆ ನೀಡುವುದಿಲ್ಲ ಎಂಬ ಆರೋಪ ಇದೆ. ಆಯುಕ್ತರು ಸಂಬAಧ ಪಟ್ಟವರನ್ನು ಸಂಪರ್ಕಿಸಿ ಸದಸ್ಯರಿಗೆ ಮಾಹಿತಿ ನೀಡುವಂತೆ ಸೂಚಿಸಬೇಕು. ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹದ ಯೋಜನೆ ಜಾರಿಯಲ್ಲಿದ್ದು, ಅದನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಸೂಚಿಸಿದರು.


Leave a Reply