Belagavi

ಇಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ: 25 ಸಾವಿರ ಮಂದಿಗೆ ಉದ್ಯೋಗ ಗುರಿ


ಬೆಳಗಾವಿ: ರಾಜ್ಯ ಸರ್ಕಾರ ಬೆಳಗಾವಿಯಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿದೆ. ಇಲ್ಲಿನ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಇಂದು ಉದ್ಯೋಗ ಮೇಳ ನಡೆಯಲಿದ್ದು, ಇದೇ ಸಂದರ್ಭದಲ್ಲಿ ರಾಜ್ಯಾದ್ಯಂತ ಜಾರಿಗೆ ಬರಲಿರುವ ಸಕಲರಿಗೂ ಉದ್ಯೋಗ’ (ಜಾಬ್ ಫಾರ್ ಆಲ್) ಕಾರ್ಯಕ್ರಮಕ್ಕೆ ಕೂಡ ಚಾಲನೆ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಸಕಲರಿಗೂ ಉದ್ಯೋಗ’ ಕಾರ್ಯಕ್ರಮದಡಿ ಕ್ವೆಸ್ ಕಾರ್ಪ್ ಕಂಪನಿಯು 25 ಸಾವಿರ ಜನರಿಗೆ ಉದ್ಯೋಗ ಒದಗಿಸುವ ಸಂಬಂಧ ಮತ್ತು ಮಹೀಂದ್ರ ಅಂಡ್ ಮಹೀಂದ್ರ ಸಮೂಹದ ನಾಂದಿ ಫೌಂಡೇಶನ್’ ಪೈಥಾನ್, ಡಿಜಿಟಲ್ ಮಾರ್ಕೆಟಿಂಗ್ ಹಾಗೂ ಸಂವಹನ ಕಲೆಗಳಲ್ಲಿ ಗ್ರಾಮೀಣ ಪ್ರದೇಶಗಳ 30 ಸಾವಿರ ವಿದ್ಯಾರ್ಥಿನಿಯರಿಗೆ ಉಚಿತವಾಗಿ ತರಬೇತಿ ನೀಡುವ ಸಂಬಂಧ ಕೌಶಲ್ಯಾಭಿವೃದ್ಧಿ ನಿಗಮದೊಂದಿಗೆ ಒಡಂಬಡಿಕೆಗೆ ಸಹಿ ಹಾಕಲಿವೆ ಎಂದರು.ಮಾಹಿತಿ ತಂತ್ರಜ್ಞಾನ (ಐಟಿ), ಜೈವಿಕ ತಂತ್ರಜ್ಞಾನ (ಬಿಟಿ), ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ.

ಬೆಳಗಾವಿ ಉದ್ಯೋಗ ಮೇಳವನ್ನು ಅತ್ಯಂತ ಕ್ಷಿಪ್ರ ಗತಿಯಲ್ಲಿ ಆಯೋಜಿಸಲಾಗಿದ್ದು, ಜನವರಿ ಮೂರನೇ ವಾರದಲ್ಲಿ ಇಲ್ಲಿ ಮತ್ತೊಂದು ಉದ್ಯೋಗ ಮೇಳವನ್ನು ಏರ್ಪಡಿಸಲಾಗುವುದು. ಮೇಳದಲ್ಲಿ 57 ಕಂಪನಿಗಳು ನೇರವಾಗಿ ಮತ್ತು 14 ಕಂಪನಿಗಳು ವರ್ಚುಯಲ್ ರೂಪದಲ್ಲಿ ಭಾಗವಹಿಸುತ್ತಿವೆ. ಈ ಕಂಪನಿಗಳಲ್ಲಿ 4,500ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿವೆ. ವರ್ಚುಯಲ್ ರೂಪದಲ್ಲಿ ಭಾಗವಹಿಸುತ್ತಿರುವ ಕಂಪನಿಗಳಿಗೆ ಧಾರವಾಡದಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.


Leave a Reply